YouVersion Logo
Search Icon

ಯೊವಾನ್ನ 21

21
ಏಳುಮಂದಿ ಶಿಷ್ಯರಿಗೆ ದರ್ಶನ
1ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: 2ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು. 3ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ. 4ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ. 5ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು. 6“ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತು. 7ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು. 8ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು. 9ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು. 10ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು. 11ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. 12ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. 13ಯೇಸುಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು.
14ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
ಯೇಸು ಮತ್ತು ಪೇತ್ರ
15ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. 16ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. 17ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; 18ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು. 19ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.
ಯೇಸು ಮತ್ತು ಆಪ್ತ ಶಿಷ್ಯ
20ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.) 21ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು. 22ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು. 23ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ. 24ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.
ಸಮಾಪ್ತಿ
25ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

Highlight

Share

Copy

None

Want to have your highlights saved across all your devices? Sign up or sign in