YouVersion Logo
Search Icon

ಲೂಕ. 4

4
ಸೈತಾನನ ಪ್ರಲೋಭನೆಗಳು
(ಮತ್ತಾ. 4:1-11; ಮಾರ್ಕ. 1:12-13)
1ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು. 2ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.
3ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು. 4ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು.
5ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ, 6“ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ. 7ನೀನು ನನಗೆ ಅಡ್ಡಬಿದ್ದೆಯಾದರೆ ಇದೆಲ್ಲಾ ನಿನ್ನದಾಗುವುದು,” ಎಂದಿತು. 8ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.
9ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು. 10ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು 11‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು. 12ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು. 13ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.
ಗಲಿಲೇಯದಲ್ಲಿ ಬೋಧನೆ
(ಮತ್ತಾ. 4:12-17; ಮಾರ್ಕ. 1:14-15)
14ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. 15ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ!
ಸ್ವಗ್ರಾಮದಲ್ಲಿ ಸನ್ಮಾನವಿಲ್ಲ
(ಮತ್ತಾ. 13:54-58; ಮಾರ್ಕ. 6:1-6)
16ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, 17ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು:
18“ದೇವರಾತ್ಮ ನನ್ನ ಮೇಲಿದೆ
ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು
ಅವರೆನ್ನನು ಅಭಿಷೇಕಿಸಿದ್ದಾರೆ;
ಬಂಧಿತರಿಗೆ ಬಿಡುಗಡೆಯನ್ನು,
ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ
ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ
19ದೇವರು ತಮ್ಮ ಜನತೆಯನ್ನು ಉದ್ಧರಿಸುವ
ಕಾಲ ಬಂತೆಂದು ಸಾರಲೂ
ಅವರು ನನ್ನನ್ನು ಕಳುಹಿಸಿದ್ದಾರೆ.”
20ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. 21ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. 22ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು. 23ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ. 24ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. 25ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. 26ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. 27ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.
28ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. 29ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. 30ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.
ಕಫೆರ್ನವುಮಿನಲ್ಲಿ ಬೋಧನೆ - ದೆವ್ವಗಳ ಉಚ್ಛಾಟನೆ
(ಮಾರ್ಕ. 1:21-28)
31ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು. 32ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. 33ದುಷ್ಟದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು. 34ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು. 35ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು. 36ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. 37ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.
ಪೇತ್ರನ ಅತ್ತೆಗೆ ಜ್ವರ ನಿವಾರಣೆ
(ಮತ್ತಾ. 8:14-15; ಮಾರ್ಕ. 1:29-34)
38ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. 39ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.
ರೋಗಿಗಳಿಗೆ ಆರೋಗ್ಯದಾನ
(ಮತ್ತಾ. 8:16-17; ಮಾರ್ಕ. 1:32-34)
40ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು. 41ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.
ಜುದೇಯ‍ಪ್ರಾಂತ್ಯದಲ್ಲಿ ಬೋಧನೆ
(ಮಾರ್ಕ. 1:35-39)
42ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು. 43ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು. 44ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.

Currently Selected:

ಲೂಕ. 4: KANCLBSI

Highlight

Share

Copy

None

Want to have your highlights saved across all your devices? Sign up or sign in