ಮಾರ್ಕ 3
3
ಸತ್ಕಾರ್ಯಕ್ಕೆ ಕಾಲಭೇದವಿಲ್ಲ
(ಮತ್ತಾ. 12:9-14; ಲೂಕ. 6:6-11)
1ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. 2ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು. 3ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, 4“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. 5ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.
6ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.
ಜನಪ್ರಿಯ ಯೇಸು
7ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. 8ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. 9ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. 10ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. 11ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು. 12ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.
ಆಯ್ಕೆಯಾದ ಹನ್ನೆರಡು ಮಂದಿ
(ಮತ್ತಾ. 10:1-4; ಲೂಕ. 6:12-16)
13ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು. 14“ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ. 15ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ : 16ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು). 17ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು). 18ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು 19ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.
ಅಕ್ಷಮ್ಯ ಪಾಪ
(ಮತ್ತಾ. 12:2-32; ಲೂಕ. 11:14-23; 12:10)
20ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು. 21:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.
22ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು. 23ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ? 24ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು. 25ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು. 26ಅದರಂತೆಯೇ ಸೈತಾನನ ಪಕ್ಷದವರು ಪರಸ್ಪರ ವಿರೋಧಿಗಳಾದರೆ ಅವನ ರಾಜ್ಯ ಉಳಿಯದು; ಅದು ಅಳಿದುಹೋಗುವುದು. 27ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು. 28ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು. 29ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು. 30(ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು).
ವಿನೂತನ ಬಾಂಧವ್ಯ
(ಮತ್ತಾ. 12:46-50; ಲೂಕ. 8:19-21)
31ಯೇಸುಸ್ವಾಮಿಯ ತಾಯಿ ಮತ್ತು ಸಹೋದರರು ಅಲ್ಲಿಗೆ ಬಂದರು. ಒಳಗೆ ಜನರು ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದರು. ಆದುದರಿಂದ ಅವರು ಹೊರಗೇ ನಿಂತು, ಯೇಸುವಿಗೆ ಬರಬೇಕೆಂದು ಹೇಳಿಕಳುಹಿಸಿದರು. 32“ನಿಮ್ಮ ತಾಯಿಯೂ ಸಹೋದರರೂ ಹೊರಗೆ ನಿಮಗಾಗಿ ಕಾದಿದ್ದಾರೆ,” ಎಂದು ಯೇಸುವಿಗೆ ತಿಳಿಸಿದರು. 33ಅದಕ್ಕೆ ಯೇಸು, “ನನಗೆ ತಾಯಿ ಯಾರು?, ಸಹೋದರರು ಯಾರು?” ಎನ್ನುತ್ತಾ ತಮ್ಮ ಸುತ್ತಲೂ ಕುಳಿತಿದ್ದವರ ಮೇಲೆ ದೃಷ್ಟಿಹರಿಸಿ, 34“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು! 35ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.
Currently Selected:
ಮಾರ್ಕ 3: KANCLBSI
Highlight
Share
Copy

Want to have your highlights saved across all your devices? Sign up or sign in
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.