ಲೂಕ. 9
9
ಪ್ರೇಷಿತರಿಗೆ ಕೊಟ್ಟ ಆದೇಶ
(ಮತ್ತಾ. 10:5-15; ಮಾರ್ಕ. 6:7-13)
1ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. 2ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. 3ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. 4ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. 5ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.
6ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.
ಹೆರೋದನ ಹೆದರಿಕೆ
(ಮತ್ತಾ. 14:1-12; ಮಾರ್ಕ. 6:14-29)
7ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ 8‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. 9ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.
ಆಹಾರ ವಿರಳ-ಭುಜಿಸಿದವರು ಬಹಳ
(ಮತ್ತಾ. 14:13-21; ಮಾರ್ಕ. 6:30-44; ಯೊವಾ. 6:1-14)
10ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು. 11ಇದನ್ನು ತಿಳಿದುಕೊಂಡು ಜನಸಮೂಹ ಅವರನ್ನು ಹಿಂಬಾಲಿಸಿತು. ಯೇಸು ಅವರನ್ನು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು.
12ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.
13ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು. 14ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, “ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ,” ಎಂದು ಹೇಳಲು, 15ಅವರು ಹಾಗೆಯೇ ಎಲ್ಲರನ್ನು ಕುಳ್ಳಿರಿಸಿದರು.
16ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು. 17ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು.
ಪೇತ್ರನ ವಿಶ್ವಾಸಪ್ರಕಟಣೆ ಮತ್ತು ಯೇಸುವಿನ ಮರಣದ ಮುನ್ಸೂಚನೆ
(ಮತ್ತಾ. 16:13-19; ಮಾರ್ಕ. 8:27-29)
18ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು. 19ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.
20ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ"#9:20 ‘ಕ್ರಿಸ್ತ’ ಅಥವಾ ‘ಮೆಸ್ಸೀಯ’. ಎಂದು ಉತ್ತರ ಕೊಟ್ಟನು. 21ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.
22ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,"#9:22 “ಜೀವಂತನಾಗಿ ಎದ್ದು ಬರುವನು” ಎಂದೂ ಕೆಲವರು ಭಾಷಾಂತರಿಸಿದ್ದಾರೆ. ಎಂದು ಅವರಿಗೆ ತಿಳಿಸಿದರು.
‘ನಾನು ಹೋದರೆ ಹೋಗಬಹುದು’
23ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. 25ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು? 26ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.
27“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.
ಯೇಸುವಿನ ದಿವ್ಯದರ್ಶನ
(ಮತ್ತಾ. 17:1-8; ಮಾರ್ಕ. 9:2-8)
28ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು. 29ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.
30ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು. 31ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು. 32ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು. 33ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ. 34ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು. 35ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು. 36ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ.
ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.
ದೆವ್ವಹಿಡಿದ ಬಾಲಕನಿಗೆ ಬಿಡುಗಡೆ
(ಮತ್ತಾ. 17:14-18; ಮಾರ್ಕ. 9:14-27)
37ಮಾರನೇ ದಿನ ಯೇಸುಸ್ವಾಮಿ ಮತ್ತು ಮೂವರು ಶಿಷ್ಯರು ಬೆಟ್ಟದಿಂದ ಇಳಿದುಬಂದಾಗ, ದೊಡ್ಡ ಗುಂಪೊಂದು ಅವರನ್ನು ಎದುರುಗೊಂಡಿತು. 38ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ಕಟಾಕ್ಷಿಸಿರಿ, ನನಗೆ ಇವನೊಬ್ಬನೇ ಮಗ. 39ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ. 40ಅದನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಬೇಡಿಕೊಂಡೆ; ಆದರೆ ಅವರಿಂದ ಸಾಧ್ಯವಾಗಲಿಲ್ಲ,” ಎಂದು ಕೂಗಿ ಕೇಳಿಕೊಂಡನು. 41ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು. 42ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು. 43ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು.
ಯೇಸುವಿನ ಮರಣದ ಮತ್ತೊಂದು ಮುನ್ಸೂಚನೆ
(ಮತ್ತಾ. 17:22-23; ಮಾರ್ಕ. 9:30-32)
ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ, 44“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು. 45ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.
ಅತ್ಯಲ್ಪನೇ ಅತ್ಯುತ್ತಮನು
(ಮತ್ತಾ. 18:1-5; ಮಾರ್ಕ. 9:33-37)
46ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು. 47ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು, 48“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.
ಶತ್ರುವಲ್ಲದವನು ಮಿತ್ರನು
(ಮಾರ್ಕ. 9:38-40)
49ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು. 50ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.
ಸಮಾರಿಯದವರು ತೋರಿದ ತಾತ್ಸಾರ
51ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು. 52ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು. 53ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ. 54ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು. 55ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು. 56ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.
ಅನುಯಾಯಿಗಳು ತ್ಯಜಿಸಬೇಕಾದ ಅಂಟುನಂಟು
(ಮತ್ತಾ. 8:19-22)
57ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು. 58ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು. 59ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು. 60ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು. 61ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು. 62ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.
S'ha seleccionat:
ಲೂಕ. 9: KANCLBSI
Subratllat
Comparteix
Copia
Vols que els teus subratllats es desin a tots els teus dispositius? Registra't o inicia sessió
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.

: