ಲೂಕನ ಸುವಾರ್ತೆ 19
19
ಜಕ್ಕಾಯ
1ಒಮ್ಮೆ ಯೇಸು ಜೆರಿಕೊ ಪಟ್ಟಣದ ಮೂಲಕ ಹೋಗುತ್ತಿದ್ದನು. 2ಆ ಪಟ್ಟಣದಲ್ಲಿ ಜಕ್ಕಾಯನೆಂಬ ಮನುಷ್ಯನಿದ್ದನು. ಅವನು ಐಶ್ವರ್ಯವಂತನೂ ಪ್ರಧಾನ ಸುಂಕವಸೂಲಿಗಾರನೂ ಆಗಿದ್ದನು. 3ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ. 4ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.
5ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.
6ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. 7ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.
8ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
9ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು. 10ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.
ದೇವರು ಕೊಡುವ ವರಗಳನ್ನು ಉಪಯೋಗಿಸಿರಿ
(ಮತ್ತಾಯ 25:14-30)
11ಯೇಸು ಪ್ರಯಾಣ ಮಾಡುತ್ತಾ ಜೆರುಸಲೇಮಿನ ಸಮೀಪಕ್ಕೆ ಬಂದನು. ಕೆಲವು ಜನರು ದೇವರ ರಾಜ್ಯವು ಬೇಗನೆ ಬರಲಿದೆ ಎಂದುಕೊಂಡರು. 12ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ#19:12 ದೂರದೇಶ ಬಹುಶಃ, ರೋಮ್‌ನಗರ. ಅರಸರು ರೋಮ್ ಚಕ್ರವರ್ತಿಯಿಂದ ನೇಮಿಸಲ್ಪಡುತ್ತಿದ್ದರು. ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು. 13ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು. 14ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
15“ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು. 16ಮೊದಲನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಸಂಪಾದಿಸಿದ್ದೇನೆ!’ ಎಂದು ಹೇಳಿದನು. 17ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
18“ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು. 19ಅರಸನು ಆ ಸೇವಕನಿಗೆ, ‘ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು.
20“ಆ ಬಳಿಕ ಇನ್ನೊಬ್ಬ ಆಳು ಬಂದು ಅರಸನಿಗೆ, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿ ಇಲ್ಲಿದೆ. 21ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.
22“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ. 23ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು. 24ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.
25“ಆ ಜನರು ಅರಸನಿಗೆ, ‘ಸ್ವಾಮೀ, ಆ ಸೇವಕನ ಬಳಿ ಈಗಾಗಲೇ ಹತ್ತುಸಾವಿರ ರೂಪಾಯಿ ಇದೆಯಲ್ಲಾ!’ ಎಂದು ಹೇಳಿದರು.
26“ಅರಸನು, ‘ತನ್ನಲ್ಲಿರುವುದನ್ನು ಉಪಯೋಗಿಸುವವನು ಹೆಚ್ಚು ಪಡೆಯುವನು. ಆದರೆ ತನ್ನಲ್ಲಿರುವುದನ್ನು ಉಪಯೋಗಿಸದವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು. 27ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”
ಜೆರುಸಲೇಮಿಗೆ ಯೇಸುವಿನ ಪ್ರವೇಶ
(ಮತ್ತಾಯ 21:1-11; ಮಾರ್ಕ 11:1-11; ಯೋಹಾನ 12:12-19)
28ಯೇಸು ಈ ಸಂಗತಿಗಳನ್ನು ಹೇಳಿದ ನಂತರ ಜೆರುಸಲೇಮಿನ ಕಡೆಗೆ ಪ್ರಯಾಣ ಮುಂದುವರಿಸಿದನು. 29ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ#19:29 ಆಲಿವ್ ಮರಗಳ ಬೆಟ್ಟ ಜೆರುಸಲೇಮ್ ನಗರದ ಹತ್ತಿರವಿರುವ ಒಂದು ಗುಡ್ಡ. ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ, 30“ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ. 31ನೀವು ಏಕೆ ಈ ಕತ್ತೆಯನ್ನು ಬಿಚ್ಚಿಕೊಂಡು ಹೋಗುತ್ತಿದ್ದೀರೆಂದು ಯಾರಾದರೂ ನಿಮ್ಮನ್ನು ಕೇಳಿದರೆ, ‘ಗುರುವಿಗೆ ಈ ಕತ್ತೆ ಬೇಕಾಗಿದೆ’ ಎಂದು ಹೇಳಿರಿ” ಎಂದನು.
32ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು 33ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು.
34ಶಿಷ್ಯರು, “ಪ್ರಭುವಿಗೆ ಇದು ಬೇಕಾಗಿದೆ” ಎಂದು ಉತ್ತರಿಸಿದರು. 35ಹೀಗೆ, ಶಿಷ್ಯರು ಆ ಕತ್ತೆಯನ್ನು ಯೇಸುವಿನ ಬಳಿಗೆ ತಂದರು. ಶಿಷ್ಯರು ತಮ್ಮ ಬಟ್ಟೆಗಳನ್ನು ಕತ್ತೆಯ ಬೆನ್ನಿನ ಮೇಲೆ ಹಾಕಿ ಯೇಸುವನ್ನು ಕತ್ತೆಯ ಮೇಲೆ ಕುಳ್ಳಿರಿಸಿದರು. 36ಯೇಸು ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು. ಶಿಷ್ಯರು ತಮ್ಮ ಬಟ್ಟೆಗಳನ್ನು ರಸ್ತೆಯಲ್ಲಿ ಯೇಸುವಿನ ಮುಂದೆ ಹಾಸಿದರು.
37ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು. 38ಅವರು,
“‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’#ಕೀರ್ತನೆ 118:26.
ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ”
ಎಂದು ಆರ್ಭಟಿಸಿದರು.
39ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು.
40ಅದಕ್ಕೆ ಯೇಸು, “ಅವರು ಹೀಗೆ ಹೇಳಲೇಬೇಕು. ಒಂದುವೇಳೆ ಅವರು ಹೀಗೆ ಹೇಳದಿದ್ದರೆ, ಈ ಕಲ್ಲುಗಳೇ ಅವರ ಬದಲಾಗಿ ಹೇಳುತ್ತವೆ ಎಂದು ನಿಮಗೆ ಹೇಳುತ್ತೇನೆ” ಎಂಬುದಾಗಿ ಉತ್ತರಿಸಿದನು.
ಜೆರುಸಲೇಮಿನ ವಿಷಯದಲ್ಲಿ ಯೇಸು ಅತ್ತನು
41ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು 42ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ. 43ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ, 44ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
ದೇವಾಲಯಕ್ಕೆ ಯೇಸುವಿನ ಪ್ರವೇಶ
(ಮತ್ತಾಯ 21:12-17; ಮಾರ್ಕ 11:15-19; ಯೋಹಾನ 2:13-22)
45ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ, 46ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’#ಯೆಶಾಯ 56:7. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’”#ಯೆರೆ. 7:11. ಎಂದನು.
47ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು. 48ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.
Voafantina amin'izao fotoana izao:
ಲೂಕನ ಸುವಾರ್ತೆ 19: KERV
Asongadina
Hizara
Dika mitovy
Tianao hovoatahiry amin'ireo fitaovana ampiasainao rehetra ve ireo nasongadina? Hisoratra na Hiditra
Kannada Holy Bible: Easy-to-Read Version
All rights reserved.
© 1997 Bible League International