Uphawu lweYouVersion
Khetha Uphawu

ಪ್ರೇಷಿತರ ಕಾರ್ಯಕಲಾಪಗಳು 6

6
ಸಪ್ತ ಸಹಾಯಕರು
1ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. 2ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. 3ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ. 4ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.
5ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು. 6ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.
7ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.
ಸ್ತೇಫನನ ಬಂಧನ
8ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. 9ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’#6:9 ಇವರು ಮೊದಲು ಗುಲಾಮರಾಗಿದ್ದು ಅನಂತರ ಬಿಡುಗಡೆಯನ್ನು ಕೊಂಡುಕೊಂಡ ಯೆಹೂದ್ಯರು. ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು. 10ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. 11ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು. 12ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು. 13ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ. 14ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು. 15ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.

Qaqambisa

Share

Copy

None

Ufuna ukuba iimbalasane zakho zigcinwe kuzo zonke izixhobo zakho? Bhalisela okanye ngena