Uphawu lweYouVersion
Khetha Uphawu

ಯೊವಾನ್ನ 20

20
ಬರಿದಾಗಿದ್ದ ಸಮಾಧಿ
(ಮತ್ತಾ. 28:1-8; ಮಾರ್ಕ. 16:1-8; ಲೂಕ. 24:1-12)
1ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. 2ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು. 3ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. 4ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು. 5ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ. 6ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು. 7ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. 8ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು. 9ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ. 10ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು.
ಮರಿಯಳಿಗೆ ದರ್ಶನ
11-12ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. 13ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು. 14ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. 15ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು. 16ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ). 17ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.
18ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು.
ಶಿಷ್ಯರಿಗೆ ದರ್ಶನ
(ಮತ್ತಾ. 28:16-20; ಮಾರ್ಕ. 16:14-18; ಲೂಕ. 24:36-49)
19ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. 20“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. 21ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. 22ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. 23ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.
ತೋಮನಿಗೆ ದರ್ಶನ
24ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. 25ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.
26ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. 27ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. 28ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. 29ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.
ಉಪಸಂಹಾರ
30ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. 31ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

Qaqambisa

Share

Copy

None

Ufuna ukuba iimbalasane zakho zigcinwe kuzo zonke izixhobo zakho? Bhalisela okanye ngena