ಯೊವಾನ್ನ 17

17
ಶಿಷ್ಯರಿಗಾಗಿ ಪ್ರಾರ್ಥನೆ
1ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. 2ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. 3ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ. 4ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. 5ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.
6“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. 7ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. 8ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.
9“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. 10ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. 11ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. 12ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. 13ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. 14ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ. 15ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. 16ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ. 17ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. 18ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ. 19ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.
20“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. 21ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ. 22ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. 23ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು. 24ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. 25ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ. 26ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.

Àwon tá yàn lọ́wọ́lọ́wọ́ báyìí:

ಯೊವಾನ್ನ 17: KANCLBSI

Ìsàmì-sí

Pín

Daako

None

Ṣé o fẹ́ fi àwọn ohun pàtàkì pamọ́ sórí gbogbo àwọn ẹ̀rọ rẹ? Wọlé pẹ̀lú àkántì tuntun tàbí wọlé pẹ̀lú àkántì tí tẹ́lẹ̀